ಬೆಳಗಾವಿ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಹಾಗೂ ಮೆರವಣಿಗೆಗಳು ಶಾಂತಿಯುತವಾಗಿ ನಡೆಯುವಂತೆ ಬೆಳಗಾವಿ ನಗರದಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF) ಹಾಗೂ ಸ್ಥಳೀಯ ಪೊಲೀಸರು ಪಥಸಂಚಲನ ನಡೆಸಿದರು.
ನಗರದ ನ್ಯೂ ಗಾಂಧಿನಗರ ಪ್ರದೇಶದಲ್ಲಿ ನಡೆದ ಈ ಪಥಸಂಚಲನದ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸಜ್ಜಾಗಿದೆ ಎಂಬ ಸಂದೇಶ ನೀಡಲಾಯಿತು. ಗಣೇಶೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತೆಯ ಭಾವನೆ ಮೂಡಿಸುವುದು ಪಥಸಂಚಲನದ ಪ್ರಮುಖ ಉದ್ದೇಶವಾಗಿತ್ತು.
ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ನಗರದ ವಿವಿಧ ಭಾಗಗಳಿಂದ ಮೆರವಣಿಗೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ಷ್ಮ ಪ್ರದೇಶಗಳ ಮೇಲೆ ವಿಶೇಷ ನಿಗಾ ವಹಿಸಿದ್ದಾರೆ. ಜನಸಂದಣಿ ಹೆಚ್ಚಾಗುವ ಸ್ಥಳಗಳು ಹಾಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಹೆಚ್ಚುವರಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.
ನಾಗರಿಕರಲ್ಲಿ ವಿಶ್ವಾಸದ ವಾತಾವರಣ ನಿರ್ಮಿಸುವುದು ಹಾಗೂ ಕಾನೂನು ಕೈಗೆತ್ತಿಕೊಳ್ಳುವವರಿಗೆ ಸ್ಪಷ್ಟ ಎಚ್ಚರಿಕೆ ನೀಡುವ ಉದ್ದೇಶದಿಂದ RAF ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ಪಥಸಂಚಲನ ನಡೆಸಿದರು.
ಗಣೇಶೋತ್ಸವವು ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವ ಸಾರುವ ಹಬ್ಬವಾಗಿದ್ದು, ಸಾರ್ವಜನಿಕರು ಪೊಲೀಸ್ ಹಾಗೂ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಗಣೇಶ ಮೆರವಣಿಗೆಗಳು ಮತ್ತು ವಿಸರ್ಜನಾ ಕಾರ್ಯಕ್ರಮಗಳನ್ನು ಶಾಂತಿಯುತವಾಗಿ ನಡೆಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.