ಬೆಂಗಳೂರು: ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ರಿಂದ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ರವಾನಿಸಲಾಗಿದೆ.
ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ 'ಯಲ್ಲೋ ಅಲರ್ಟ್' ಘೋಷಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.