ಶಿವಮೊಗ್ಗ: ಅಂತರ್ಜಲ ಮಟ್ಟ ಎಲ್ಲೆಡೆ ಕುಸಿಯುತ್ತಿದ್ದು, ಮೇಲ್ಮೈ ನೀರಿನಿಂದ ಗ್ರಾಮೀಣ ಪ್ರದೇಶಗಳಿಗೆ ನೀರು ಪೂರೈಕೆ ಮಾಡಲು ಬಹುಗ್ರಾಮ ಕುಡಿಯುವ ನೀರು ಯೋಜನೆ ಮತ್ತು ಏಕ ಗ್ರಾಮ ಕುಡಿಯುವ ನೀರು ಯೋಜನೆಗೆ 67 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿಂದು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಏಕಗ್ರಾಮ ಕುಡಿಯುವ ನೀರು ಯೋಜನೆಯ ಶೇ.80ರಷ್ಟು ಕಾಮಗಾರಿ ಮುಕ್ತಾಯವಾಗಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಶೇ.40ರಷ್ಟು ಕಾಮಗಾರಿ ಇನ್ನೂ ಆಗಬೇಕಾಗಿದೆ. ಈ ಎಲ್ಲ ಕಾಮಗಾರಿಯನ್ನೂ ಸಮರೋಪಾದಿಯಲ್ಲಿ ಮುಗಿಸಿ, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವಂತೆ ಸೂಚಿಸಿದರು.
ಎಲ್ಲ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಸಲು ಎಲ್ಲ ಸಾಧ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ ಅವರು, ನೀರು ಲಭ್ಯವಿಲ್ಲದ ಗ್ರಾಮಗಳಲ್ಲಿ ಖಾಸಗಿ ಬೋರ್ ವೆಲ್ ಬಾಡಿಗೆಗೆ ಪಡೆದು ಅಥವಾ ಪರ್ಯಾಯ ಜಲ ಮೂಲದಿಂದ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಸೂಚನೆ ನೀಡಿದರು.
ಈ ರೀತಿ ನೀರು ಪೂರೈಕೆ ಮಾಡುವ ಟ್ಯಾಂಕರ್ ಮಾಲೀಕರಿಗೆ ಸಕಾಲದಲ್ಲಿ ಹಣ ಪಾವತಿ ಮಾಡಬೇಕು. ತಿಂಗಳುಗಟ್ಟಲೆ ಅವರಿಗೆ ಹಣ ಪಾವತಿಸದಿದ್ದರೆ ಅವರು ಟ್ಯಾಂಕರ್ ನೀಡುವುದಿಲ್ಲ. ಇದರಿಂದ ಜನರಿಗೆ ತೊಂದರೆ ಆಗುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಗ್ರಾಮೀಣ ನೀರು ಪೂರೈಕೆಗೆ ಸಾಕಷ್ಟು ಹಣವಿದೆ. ಆದರೆ ಹಣವೇ ವೆಚ್ಚವಾಗಿಲ್ಲ. ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆಯೋ ಅಲ್ಲಿ ಕೊಳವೆ ಬಾವಿ ತೋಡಿಸಲು ಕ್ರಮ ವಹಿಸುವಂತೆ ಸೂಚಿಸಿದ ಸಚಿವರು, ಮುಂಬರುವ ಬೇಸಿಗೆಯಲ್ಲಿ ಕೂಡ ನೀರಿನ ಸಮಸ್ಯೆ ಆಗದಂತೆ ಈಗಿನಿಂದಲೇ ಕ್ರಮ ವಹಿಸುವಂತೆಯೂ ತಿಳಿಸಿದರು.
ಅರಣ್ಯ ಸಮಸ್ಯೆ ಪರಿಹರಿಸಲು ಕ್ರಮ:
ಕೆಲವು ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆ ಮತ್ತು ಏಕಗ್ರಾಮ ಕುಡಿಯುವ ನೀರು ಯೋಜನೆ ಕೊಳವೆಗಳನ್ನು ಅಳವಡಿಸಲು ಅರಣ್ಯ ಪ್ರದೇಶ ಇರುವ ಕಾರಣ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದಾಗ, ಈ ಸಂಬಂಧ ಅರಣ್ಯ ಇಲಾಖೆ ಉನ್ನತಾಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ಕರೆದು ಸಮಸ್ಯೆ ಪರಿಹರಿಸುವುದಾಗಿ ಈಶ್ವರ ಖಂಡ್ರೆ ತಿಳಿಸಿದರು.
ಸಭೆಯಲ್ಲಿ ಶಾಸಕರುಗಳಾದ ಸಂಗಮೇಶ್, ಶಾರದಾ ಪೂರ್ಯಾನಾಯಕ್, ಬಿಲ್ಕಿಶ್ ಭಾನು, ಆಯುಕ್ತರಾದ ವೈ.ಎಸ್. ಪಾಟೀಲ್, ಶಿವಮೊಗ್ಗ ಜಿ.ಪಂ. ಸಿಇ.ಓ ರಿಷಿ ಆನಂದ್, ವಿಬಿಜಿ ರಾಮ್ ಜಿ ನಿರ್ದೇಶಕ ದಿಡ್ಡಿಮನಿ ಮೊದಲಾದವರು ಪಾಲ್ಗೊಂಡಿದ್ದರು.