ಬಳ್ಳಾರಿ, ಅ.15: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಕಾನೂನು ತೊಡಕುಗಳನ್ನು ನಿವಾರಿಸಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ, ನೇಮಕಾತಿ ಪ್ರಕ್ರಿಯೆಯಲ್ಲಿ ತೊಂದರೆಗೊಳಗಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಹಿರಿಯ ವಕೀಲ ಹಾಗೂ ಬಳ್ಳಾರಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಜೈರಾಮ್ ಒತ್ತಾಯಿಸಿದರು.
ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳವು ಎಸ್ಸಿ–ಎಸ್ಟಿ ಸಮುದಾಯಗಳ ಬಹುದಿನಗಳ ಹೋರಾಟದ ಫಲವಾಗಿದೆ. ನ್ಯಾಯಾಲಯದ ಆದೇಶದಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ, ವಿಶೇಷವಾಗಿ ಶಿಕ್ಷಕ ಹುದ್ದೆಗಳ ಅಭ್ಯರ್ಥಿಗಳು ಅನಿಶ್ಚಿತತೆ ಎದುರಿಸುತ್ತಿದ್ದಾರೆ. ಅವರ ಭವಿಷ್ಯಕ್ಕೆ ಧಕ್ಕೆಯಾಗದಂತೆ ಸರ್ಕಾರ ಕಾನೂನುಬದ್ಧ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದರು.
ಮೀಸಲಾತಿ ವಿಚಾರವನ್ನು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಪರಿಗಣಿಸಿ, ಅರ್ಹ ಸಮುದಾಯಗಳಿಗೆ ಸಂವಿಧಾನಬದ್ಧ ಹಕ್ಕುಗಳು ದೊರೆಯುವಂತೆ ಸರ್ಕಾರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಬೇಕು ಎಂದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಮುಖಂಡ ಮುದಿಮಲಯ್ಯ, ಡಿಎಸ್ಎಸ್ ರಾಜ್ಯ ಸಂಚಾಲಕ ಎ. ಮಾನಯ್ಯ, ಎಲ್. ಮಾರೆಣ್ಣ, ಪೃಥ್ವಿರಾಜ್, ಜಗನ್ನಾಥ್, ತಳವಾರ್ ದುರುಗಪ್ಪ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.