ಬೆಳಗಾವಿ: ಎಸ್‌ಡಿಆರ್‌ಎಫ್ ಸಿಪಿಐ (SDRF CPI) ಅಧಿಕಾರಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ. ಸಿಪಿಐ ಶ್ರೀಶೈಲ ಚೌಗಲೆ (37) ಮೃತ ಅಧಿಕಾರಿ ಎಂದು ಗುರುತಿಸಲಾಗಿದೆ. ಬೆಳಗಾವಿಯ ಚನ್ನಮ್ಮ ನಗರದ ನಿವಾಸದಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯ ಕೊಠಡಿಗೆ ಒಳಗಿನಿಂದ ಬಾಗಿಲು ಹಾಕಿಕೊಂಡು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆ ಬಗ್ಗೆ ಪತ್ನಿ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬಾಗಿಲು ಒಡೆದು ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಆಗಲೇ ಮೃತಪಟ್ಟಿರುವುದು ದೃಢಪಟ್ಟಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಮೃತದೇಹವನ್ನು ಬೆಳಗಾವಿ ಬೀಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.