ಬೆಂಗಳೂರು: SSLC ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆ-2ಗೆ ಹಾಜರಾಗಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕರೆ ನೀಡಿದ್ದಾರೆ. ಪರೀಕ್ಷೆ-2ಗೆ ಹಾಜರಾಗುವ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದ್ದಾರೆ. ಜೊತೆಗೆ ವಿಷಯವಾರು ಅನುತ್ತೀರ್ಣ ವಿದ್ಯಾರ್ಥಿಗಳ ಅಂಕಿಅಂಶಗಳನ್ನೂ ಬಿಡುಗಡೆ ಮಾಡಲಾಗಿದೆ. ಪರೀಕ್ಷೆ-1ರಲ್ಲಿ ಒಟ್ಟು 45,415 ವಿದ್ಯಾರ್ಥಿಗಳು ಫೇಲ್ ಆಗಿದ್ದು, 1 ವಿಷಯದಲ್ಲಿ 20,691, 2 ವಿಷಯಗಳಲ್ಲಿ 10,509, 3 ವಿಷಯಗಳಲ್ಲಿ 6,103, 4 ವಿಷಯಗಳಲ್ಲಿ 3,799, 5 ವಿಷಯಗಳಲ್ಲಿ 2,552 ಹಾಗೂ ಎಲ್ಲಾ ವಿಷಯಗಳಲ್ಲಿ 1,716 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯವನ್ನು ಉಜ್ವಲಗೊಳಿಸುವುದು ಸರ್ಕಾರ, ಶಿಕ್ಷಣ ಇಲಾಖೆ ಹಾಗೂ ಸಮಾಜದ ಒಟ್ಟಾರೆ ಜವಾಬ್ದಾರಿಯಾಗಿದೆ. ಫಲಿತಾಂಶದಿಂದ ನಿರಾಶೆಗೊಂಡು ಯಾರೂ ಶಿಕ್ಷಣವನ್ನು ಮಧ್ಯದಲ್ಲಿ ನಿಲ್ಲಿಸಬಾರದು ಎಂಬುದು ಸರ್ಕಾರದ ದೃಢ ನಿಲುವಾಗಿದೆ. ಈ ಹಿನ್ನೆಲೆಯಲ್ಲಿ ಅನುತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರಿಗೆ ಅಗತ್ಯವಾದ ಶೈಕ್ಷಣಿಕ ಮಾರ್ಗದರ್ಶನ ನೀಡುವಂತೆ ಇಲಾಖೆಯ ಉಪ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಆರ್ಥಿಕ ಭಾರವಾಗಬಾರದೆಂಬ ಉದ್ದೇಶದಿಂದ ಕಳೆದ ವರ್ಷದಂತೆ ಈ ವರ್ಷವೂ ಪರೀಕ್ಷಾ ಶುಲ್ಕವನ್ನು ಸರ್ಕಾರವೇ ಭರಿಸುತ್ತದೆ. ಜೊತೆಗೆ ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ-2ನಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಮಾಹಿತಿಯ ಕೊರತೆಯಿಂದ ಯಾವುದೇ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.