ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ದಳಪತಿ ವಿಜಯ್ ಅವರ ಟಿವಿಕೆ ಪಕ್ಷ ಮೊದಲ ಚುನಾವಣೆಯಲ್ಲೇ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಮೊದಲ ಬಾರಿಗೆ ರಾಜಕೀಯ ಪ್ರವೇಶ ಮಾಡಿದ ದಳಪತಿ ವಿಜಯ್ ಭರ್ಜರಿ ಜಯ ಸಾಧಿಸಿದ್ದು, ಬುಧವಾರ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅವರನ್ನು ಭೇಟಿಯಾಗಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಇಂದು ಮಧ್ಯಾಹ್ನ 3.30ರ ಸುಮಾರಿಗೆ ಲೋಕಭವನಕ್ಕೆ ಆಗಮಿಸಿದ ವಿಜಯ್ ಅವರು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾಗಿ, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವುದಾಗಿ ಮನವಿ ಪತ್ರ ಸಲ್ಲಿಸಿದ್ದಾರೆ. ಸರ್ಕಾರ ರಚನೆ ಸಂಬಂಧ ಟಿವಿಕೆ ಸಂಸ್ಥಾಪಕ ವಿಜಯ್ ಹೊಸ ಪತ್ರವನ್ನು ಸಲ್ಲಿಸಿದ್ದು, ಮೇ 7ರಂದು ಬೆಳಗ್ಗೆ 11.30ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಸುವಂತೆ ರಾಜ್ಯಪಾಲರಿಗೆ ವಿನಂತಿಸಿದ್ದಾರೆ ಎಂದು ಟಿವಿಕೆ ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ಚೆನ್ನೈನ ನೆಹರೂ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕಾಗಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.