Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಶನಿವಾರದಿಂದ ಗುರ್ಲಾಪುರದಲ್ಲಿ ಮತ್ತೆ ಕಬ್ಬು ಬೆಳೆಗಾರರ ಹೋರಾಟ

ಬೆಲೆ ನಿಗದಿಯಾಗುವವರೆಗೆ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಅವಕಾಶವಿಲ್ಲ: ರೈತರ ಎಚ್ಚರಿಕೆ

ಬೆಳಗಾವಿ, ಅ. 16 (ಸಮದರ್ಶಿ ಸುದ್ದಿ): ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿ ಹೋರಾಟ ಮುಂದುವರಿಸಿರುವ ರೈತರು, ಶನಿವಾರ (ಅಕ್ಟೋಬರ್ 17)ದಿಂದ ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಗ್ರಾಮದಲ್ಲೂ ಮತ್ತೆ ಪ್ರತಿಭಟನೆ ಆರಂಭಿಸಲು ನಿರ್ಧರಿಸಿದ್ದಾರೆ. ಕಬ್ಬಿನ ಬೆಲೆ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸ್ಪಷ್ಟ ನಿರ್ಧಾರ ಪ್ರಕಟಿಸುವವರೆಗೆ ಸಕ್ಕರೆ ಕಾರ್ಖಾನೆಗಳ ಕಾರ್ಯಾರಂಭಕ್ಕೆ ಅವಕಾಶ ನೀಡುವುದಿಲ್ಲ ಎಂದು ರೈತರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.

ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಬೇಕು, ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಿಸಬೇಕು ಹಾಗೂ ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಪ್ರತಿ ಟನ್‌ಗೆ ₹1,000 ಹೆಚ್ಚುವರಿ ಪ್ರೋತ್ಸಾಹಧನ ನೀಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಗಳಾಗಿವೆ. ತಮಿಳುನಾಡು ಸರ್ಕಾರ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ಹೆಚ್ಚುವರಿಯಾಗಿ ₹700 ನೀಡುತ್ತಿರುವುದನ್ನು ಉಲ್ಲೇಖಿಸಿರುವ ರೈತರು, ಕರ್ನಾಟಕ ಸರ್ಕಾರವೂ ಇದೇ ಮಾದರಿಯಲ್ಲಿ ರೈತರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದ್ದಾರೆ.

ಕಬ್ಬಿನ ಬೆಲೆ ನಿಗದಿ ಕುರಿತು ಕೇಂದ್ರ ಸರ್ಕಾರದೊಂದಿಗೆ ನಡೆದ ಮಾತುಕತೆ ಫಲಪ್ರದವಾಗದ ಹಿನ್ನೆಲೆಯಲ್ಲಿ ರೈತರು ಬೆಳಗಾವಿ ಜಿಲ್ಲೆಯ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಹೆದ್ದಾರಿ ತಡೆ ಹೋರಾಟ ಅಂತ್ಯಗೊಂಡಿದ್ದರೂ ಕಬ್ಬು ಬೆಳೆಗಾರರ ಬೇಡಿಕೆಗಳು ಈಡೇರದ ಕಾರಣ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ರೈತ ಸಂಘಟನೆಗಳು ಮುಂದಾಗಿವೆ.

ಪ್ರಲ್ಹಾದ ಜೋಶಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಹುಬ್ಬಳ್ಳಿಯ ನಿವಾಸಕ್ಕೆ ಮುತ್ತಿಗೆ ಹಾಕುವ ದಿನಾಂಕ ಮತ್ತು ಸಮಯವನ್ನು ನಿರ್ಧರಿಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಮತ್ತು ಪದಾಧಿಕಾರಿಗಳ ಮಹತ್ವದ ಸಭೆ ಶನಿವಾರ ಕಿತ್ತೂರು ತಾಲ್ಲೂಕಿನ ಎಂ.ಕೆ. ಹುಬ್ಬಳ್ಳಿಯಲ್ಲಿ ನಡೆಯಲಿದೆ.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸಚಿವರ ನಿವಾಸದವರೆಗೆ ಮೆರವಣಿಗೆ ನಡೆಸುವುದು, ಮುತ್ತಿಗೆ ಕಾರ್ಯಕ್ರಮದ ದಿನಾಂಕ ನಿಗದಿಪಡಿಸುವುದು ಹಾಗೂ ಮುಂದಿನ ಹೋರಾಟದ ರೂಪುರೇಷೆಗಳನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ.

ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡುವಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಫಲರಾಗಿದ್ದಾರೆ. ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರದ ಮುಂದೆ ಸಮರ್ಥವಾಗಿ ಪ್ರಸ್ತಾಪಿಸಲು ಹಿಂದೇಟು ಹಾಕುತ್ತಿದ್ದಾರೆ. ಕಬ್ಬಿನ ಬೆಲೆ ಹೆಚ್ಚಳ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಲ್ಲಿ ಸಚಿವರು ನಿರೀಕ್ಷಿತ ಪಾತ್ರ ವಹಿಸಿಲ್ಲ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ವ್ಯಾಪಕಗೊಳಿಸುವುದಾಗಿ ಸಂಘಟನೆಗಳು ಎಚ್ಚರಿಸಿವೆ. ಕಬ್ಬಿನ ಬೆಲೆ ಕುರಿತು ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವವರೆಗೆ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕಾರ್ಯ ಆರಂಭಿಸಲು ಅವಕಾಶ ನೀಡುವುದಿಲ್ಲ ಎಂದು ರೈತರು ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿ ಚಲೋ ಪಾದಯಾತ್ರೆ ಮುಂದುವರಿಕೆ

ಇದೇ ವೇಳೆ, ಕಬ್ಬು ಬೆಳೆಗಾರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆರಂಭಿಸಿರುವ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಶುಕ್ರವಾರವೂ ಮುಂದುವರಿಯಿತು. ಬೆಳಗಾವಿ ಹೊರವಲಯದ ಬೂತ್ರಮನಹಟ್ಟಿ ಸಮೀಪದ ಮುಕ್ತಿಮಠದಿಂದ ಗುರುವಾರ ಹೊರಟ ರೈತರು, ಅಂದು ಸಂಜೆ ಸುವರ್ಣ ವಿಧಾನಸೌಧ ತಲುಪಿದ್ದರು.

ರಾತ್ರಿ ವಿಧಾನಮಂಡಲದ ಕಟ್ಟಡದ ಸಮೀಪವಿರುವ ಕಲ್ಯಾಣ ಮಂಟಪದಲ್ಲಿ ವಾಸ್ತವ್ಯ ಹೂಡಿದ್ದ ರೈತರು, ಶುಕ್ರವಾರ ಬೆಳಿಗ್ಗೆ ಮತ್ತೆ ಪಾದಯಾತ್ರೆ ಆರಂಭಿಸಿದರು. ವಿವಿಧ ಗ್ರಾಮಗಳ ಮೂಲಕ ಸಾಗಿದ ಪಾದಯಾತ್ರೆ ಕಿತ್ತೂರು ತಾಲ್ಲೂಕಿನ ಎಂ.ಕೆ. ಹುಬ್ಬಳ್ಳಿ ತಲುಪಿದ್ದು, ರೈತರು ಅಲ್ಲಿಯೇ ರಾತ್ರಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಪಾದಯಾತ್ರೆಯಲ್ಲಿ ಭಾಗವಹಿಸಿರುವ ರೈತರು ಪ್ರತಿದಿನ ಸುಮಾರು 30 ಕಿ.ಮೀ. ದೂರ ಕ್ರಮಿಸುವ ಉದ್ದೇಶ ಹೊಂದಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಚೂನಪ್ಪ ಪೂಜಾರಿ ತಿಳಿಸಿದ್ದಾರೆ. ರೈತ ಮುಖಂಡ ಶಶಿಕಾಂತ ಗುರೂಜಿ ಶುಕ್ರವಾರ ಪಾದಯಾತ್ರೆಯಲ್ಲಿ ಪಾಲ್ಗೊಂಡು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಪಾದಯಾತ್ರೆಯಲ್ಲಿ ಭಾಗವಹಿಸಿರುವ ರೈತರಿಗೆ ಆಹಾರ, ಕುಡಿಯುವ ನೀರು ಹಾಗೂ ಇತರ ಅಗತ್ಯ ಸಾಮಗ್ರಿಗಳನ್ನು ಪೂರೈಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಆಹಾರ ಪದಾರ್ಥಗಳು ಮತ್ತು ಸಾಮಗ್ರಿಗಳನ್ನು ಸಾಗಿಸಲು ಹಲವು ಟ್ರ್ಯಾಕ್ಟರ್‌ಗಳು ಹಾಗೂ ಎತ್ತಿನ ಬಂಡಿಗಳನ್ನು ಬಳಸಲಾಗುತ್ತಿದೆ. ರೈತರು ಮಾರ್ಗಮಧ್ಯೆ ವಿಶ್ರಾಂತಿ ಪಡೆದು ಪಾದಯಾತ್ರೆ ಮುಂದುವರಿಸುತ್ತಿದ್ದಾರೆ.

ಕಬ್ಬು ಬೆಳೆಗಾರರಿಗೆ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ನ್ಯಾಯಯುತ ಬೆಲೆ ದೊರೆಯಬೇಕು. ಸಕ್ಕರೆ ಕಾರ್ಖಾನೆಗಳು ಹಾಗೂ ಸರ್ಕಾರಗಳು ರೈತರ ಹಿತಾಸಕ್ತಿಗೆ ಆದ್ಯತೆ ನೀಡಬೇಕು ಎಂಬುದು ಹೋರಾಟಗಾರರ ಆಗ್ರಹವಾಗಿದೆ.

ಕಬ್ಬಿನ ಬೆಲೆ ಹೆಚ್ಚಳ, ಸಕ್ಕರೆಯ ಕನಿಷ್ಠ ಬೆಂಬಲ ಬೆಲೆ ಪರಿಷ್ಕರಣೆ ಹಾಗೂ ಹೆಚ್ಚುವರಿ ಪ್ರೋತ್ಸಾಹಧನ ಸೇರಿದಂತೆ ಎಲ್ಲ ಪ್ರಮುಖ ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರಿಸುವುದಾಗಿ ರೈತ ಸಂಘಟನೆಗಳು ಘೋಷಿಸಿವೆ. ಗುರ್ಲಾಪುರದಲ್ಲಿ ಶನಿವಾರದಿಂದ ಮತ್ತೆ ಪ್ರತಿಭಟನೆ ಆರಂಭವಾಗಲಿದ್ದು, ಎಂ.ಕೆ. ಹುಬ್ಬಳ್ಳಿಯಲ್ಲಿ ನಡೆಯಲಿರುವ ರೈತ ಮುಖಂಡರ ಸಭೆಯಲ್ಲಿ ಮುಂದಿನ ಹೋರಾಟದ ಸ್ವರೂಪ ನಿರ್ಧಾರವಾಗಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ