ಬೆಂಗಳೂರು, (ಮೇ 29): ನನ್ನ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಆನ್‌ಲೈನ್ ಗೇಮಿಂಗ್ ನಿಷೇಧ ಕಾನೂನಿಗೆ ಸುಪ್ರೀಂ ಕೋರ್ಟ್ ಮಾನ್ಯತೆ ನೀಡಿರುವುದು ಸಂತಸದ ವಿಚಾರ. ಆನ್‌ಲೈನ್ ಗೇಮಿಂಗ್ ತಡೆಯುವ ನಮ್ಮ ಪ್ರಯತ್ನಕ್ಕೆ ಇದು ದೊಡ್ಡ ಜಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ Basavaraj Bommai ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನ್ಯಾಯಮೂರ್ತಿಗಳಾದ ಜೆಬಿ ಪರ್ಡಿವಾಲಾ ಮತ್ತು ಆರ್. ಮಹದೇವನ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಆನ್‌ಲೈನ್ ಗ್ಯಾಂಬ್ಲಿಂಗ್ ವಿರೋಧಿ ಕಾನೂನನ್ನು ಎತ್ತಿಹಿಡಿದಿದೆ ಎಂದು ಹೇಳಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಪೊಲೀಸ್ ತಿದ್ದುಪಡಿ ಕಾಯ್ದೆ–2021 ಮೂಲಕ ಕರ್ನಾಟಕ ಪೊಲೀಸ್ ಕಾಯ್ದೆ 1963ಕ್ಕೆ ಹಲವು ತಿದ್ದುಪಡಿಗಳನ್ನು ತರಲಾಗಿತ್ತು. ಗ್ಯಾಂಬ್ಲಿಂಗ್ ವ್ಯಾಖ್ಯಾನವನ್ನು ವಿಸ್ತರಿಸಿ, ಆನ್‌ಲೈನ್ ಗೇಮಿಂಗ್ ಅನ್ನು ಜಾಮೀನು ರಹಿತ ಅಪರಾಧವೆಂದು ಘೋಷಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ಬಳಿಕ ಹೈಕೋರ್ಟ್ ಈ ಕಾನೂನಿಗೆ ತಡೆ ನೀಡಿದ್ದರಿಂದ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಇದೀಗ ಸುಪ್ರೀಂ ಕೋರ್ಟ್ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರಗಳ ಕಾನೂನುಗಳನ್ನು ಮಾನ್ಯಗೊಳಿಸುವ ಮೂಲಕ ಆನ್‌ಲೈನ್ ಗೇಮಿಂಗ್‌ನಿಂದ ಜನರು, ವಿಶೇಷವಾಗಿ ಬಡವರು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಘಟನೆಗಳನ್ನು ತಡೆಯುವ ಉದ್ದೇಶಕ್ಕೆ ಬಲ ನೀಡಿದೆ ಎಂದು ಅವರು ಹೇಳಿದ್ದಾರೆ. ಜೊತೆಗೆ, ರಾಜ್ಯ ಸರ್ಕಾರ ಈಗ ಈ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು, ಆನ್‌ಲೈನ್ ಗೇಮಿಂಗ್‌ನಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕದಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.