LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗೂ ಸುತ್ತಿಕೊಂಡ ಜನಿವಾರ, ಮಂಗಳಸೂತ್ರ ವಿವಾದ

ಮಂಗಳೂರು: ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆಯ ವೇಳೆ ಸೃಷ್ಟಿಯಾದ ಜನಿವಾರ ವಿವಾದ ಈಗ ಕೇಂದ್ರ ಸರಕಾರ ನಡೆಸುವ ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗೂ ಸುತ್ತಿಕೊಂಡಿದೆ. ಮಂಡಳಿಯ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಧಾರ್ಮಿಕ ಚಿಹ್ನೆಗಳಾದ ಮಂಗಳಸೂತ್ರ ಮತ್ತು ಜನಿವಾರ ಕಳಚಿಟ್ಟು ಪರೀಕ್ಷೆ ಬರೆಯಬೇಕೆಂದು ಹೇಳಿರುವುದು ಆಕ್ರೋಶಕ್ಕೆ ಗುರಿಯಾಗಿದೆ.

ರೈಲ್ವೆ ನೇಮಕಾತಿ ಮಂಡಳಿಯು ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಏ.29ರಂದು ಶುರುವಾಗಲಿದೆ. ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ತೆರಳುವಾಗ ಧಾರ್ಮಿಕ ಸಂಕೇತಗಳಾದ ಮಂಗಳಸೂತ್ರ, ಜನಿವಾರ ಮೊದಲಾವುಗಳನ್ನು ಧರಿಸುವಂತಿಲ್ಲ ಎಂದು ಪರೀಕ್ಷೆ ಪ್ರವೇಶ ಪತ್ರದ ಮಾರ್ಗಸೂಚಿಯಲ್ಲಿ ಸೂಚನೆ ನೀಡಲಾಗಿದೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌, ರೈಲ್ವೆ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಏ.28, 29, 30ರಂದು ಮಂಗಳೂರಿನ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು, ಆ ಪರೀಕ್ಷೆ ಬರೆಯಬೇಕಾದರೆ ಹಿಂದೂಗಳು ಅವರ ಧಾರ್ಮಿಕ ಸಂಪ್ರದಾಯಗಳಾದ ಮಂಗಳಸೂತ್ರ, ಜನಿವಾರ ತೆಗೆಯಬೇಕೆಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ರೀತಿಯ ಧಾರ್ಮಿಕ ವಿರೋಧಿ ಧೋರಣೆ ಸಹಿಸಲು ಅಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿ, ಸಂಸದರು ಇಂತಹ ಆದೇಶವನ್ನು ಕೈಬಿಟ್ಟು ನಡೆಯಲಿರುವ ಪರೀಕ್ಷೆಯಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ಶರಣ್ ಪಂಪ್‌ವೆಲ್‌ ಆಗ್ರಹಿಸಿದ್ದಾರೆ.

ರೈಲ್ವೆ ನೇಮಕಾತಿ ಪರೀಕ್ಷೆ ಬರೆಯಲು ಹಿಂದೂಗಳ ಧಾರ್ಮಿಕ ಚಿಹ್ನೆಗಳಾದ ಮಂಗಳಸೂತ್ರ, ಜನಿವಾರ ತೆಗೆಯಬೇಕೆಂದು ಸೂಚನೆ ನೀಡಿರುವುದು ಸರಿಯಲ್ಲ. ರಾಜ್ಯದಲ್ಲಿ ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆ ಬರೆಯುವ ಹಿಂದೂ ಅಭ್ಯರ್ಥಿಗಳ ಜನಿವಾರವನ್ನು ಕಿತ್ತು ಹಾಕಿದ ಪ್ರಕರಣದಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಇದು ಇಡೀ ದೇಶದ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಹೆಣ್ಣುಮಕ್ಕಳು ತಾಳಿಸರ ಕಳಚುವಂತೆ, ಸಿಂಧೂರ ಅಳಿಸುವಂತೆ ಮಾಡುವುದು, ಪವಿತ್ರ ಜನಿವಾರವನ್ನು ಕಿತ್ತುಹಾಕುವಂತೆ ಹೇಳುವುದರಿಂದ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟಾಗುತ್ತದೆ. ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕ್ರಮಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಪ್ರಚಾರ ಪ್ರಮುಖ್ ಪ್ರದೀಪ್‌ ಸರಿಪಲ್ಲ ಆಗ್ರಹಿಸಿದ್ದಾರೆ.

ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ಕಿತ್ತುಹಾಕಿದ್ದು ದೊಡ್ಡ ವಿವಾದವಾಗಿದ್ದು, ಅದರ ಕಾವು ಇನ್ನೂ ಆರಿಲ್ಲ. ಈ ಪ್ರಕರಣ ನ್ಯಾಯಾಲಯ ಮತ್ತು ಮಾನವ ಹಕ್ಕು ಆಯೋಗದ ತನಕ ತಲುಪಿದೆ. ಜನಿವಾರ ಕಿತ್ತು ಹಾಕಿದ ಪ್ರಕರಣದ ವಿರುದ್ಧ ಹಿಂದು ಸಂಘಟನೆಗಳು, ಬ್ರಾಹ್ಮಣ ಸಂಘಟನೆಗಳು ಮತ್ತು ಬಿಜೆಪಿ ಉಗ್ರ ಹೋರಾಟ ನಡೆಸಿತ್ತು. ಈ ಮಧ್ಯೆ ಈಗ ಕೇಂದ್ರ ಸರಕಾರ ನಡೆಸುವ ಪರೀಕ್ಷೆಯಲ್ಲೂ ಜನಿವಾರ ಮತ್ತು ಮಂಗಲಸೂತ್ರ ತೆಗೆಯಬೇಕೆಂದು ಹೇಳಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST