ಬೆಳಗಾವಿ: ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕು ಮತ್ತು ಚುನಾವಣಾ ವ್ಯವಸ್ಥೆಯ ಪಾರದರ್ಶಕತೆಯನ್ನು ಕಾಪಾಡುವ ಉದ್ದೇಶದಿಂದ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮತಕಳ್ಳತನದ ವಿರುದ್ಧದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಪಾಲ್ಗೊಂಡರು.
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಮತದಾರನ ಮತಕ್ಕೂ ಸಮಾನ ಮೌಲ್ಯವಿದೆ. ಜನರು ತಮ್ಮ ಮತದಾನದ ಹಕ್ಕಿನ ಮೂಲಕ ಆಯ್ಕೆ ಮಾಡುವ ಪ್ರತಿನಿಧಿಗಳೇ ಪ್ರಜಾಪ್ರಭುತ್ವದ ಶಕ್ತಿಯಾಗಿದ್ದಾರೆ. ಹೀಗಾಗಿ ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿನ ಪಾರದರ್ಶಕತೆ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಸಂರಕ್ಷಣೆ ಅತ್ಯಂತ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಮತಕಳ್ಳತನದ ವಿರುದ್ಧ ಧ್ವನಿ ಎತ್ತುವುದು ಅಗತ್ಯವಾಗಿದೆ ಎಂಬ ಸಂದೇಶವನ್ನು ಪ್ರತಿಭಟನೆಯ ಮೂಲಕ ಸಾರಲಾಯಿತು.
ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವಿಗಾಗಿ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ. ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮತದಾರರ ಹಕ್ಕುಗಳನ್ನು ರಕ್ಷಿಸುವುದು ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವ ಕಾರ್ಯ ಮುಂದುವರಿಯಲಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ದೆಹಲಿಯಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹಲವು ಜನಪ್ರತಿನಿಧಿಗಳು, ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿ ಮತದಾರರ ಹಕ್ಕುಗಳ ರಕ್ಷಣೆ ಮತ್ತು ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುರಿತು ತಮ್ಮ ನಿಲುವು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಸದರಾದ ಪ್ರಭಾ ಮಲ್ಲಿಕಾರ್ಜುನ, ಕುಮಾರ ನಾಯ್ಕ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.