ಬೆಂಗಳೂರು: ಚಾಕುವಿನಿಂದ ಇರಿದು ಪತಿಯನ್ನೇ ಪತ್ನಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಮಲ್ಲತ್ತಹಳ್ಳಿಯಲ್ಲಿ ನಡೆದಿದೆ.
ತೌಹಿಬ್ ಪಾಶಾ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪತ್ನಿ ಸೋಹಾನಾ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ತೌಹಿಬ್ ನನ್ನು ಸೋಹಾನಾ ಕೊಲೆ ಮಾಡಿದ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ದಂಪತಿ ನಡುವೆ ಗಲಾಟೆಯಾಗಿದೆ. ಪತ್ನಿ, ಆಕೆಯ ತಾಯಿ ಮತ್ತು ತಂದೆ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ತೌಹಿಬ್ ಕುಟುಂಬದವರು ಆರೋಪಿಸಿದ್ದಾರೆ.
ಅನ್ನಪೂರ್ಣೇಶ್ವರಿ ನಗರ ಠಾಣೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಕೊಲೆಯಾದ ತೌಹಿಬ್ ನ ಪತ್ನಿ, ಅತ್ತೆ, ಮಾವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.