ಕಠ್ಮಂಡು: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ (Turkish Airlines) ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದೆ.
ಇಂದು (ಮೇ 11) ಮುಂಜಾನೆ ಇಸ್ತಾನ್‌ಬುಲ್‌ನಿಂದ (Istanbul) ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದ ಟರ್ಕಿಶ್ ಏರ್‌ಲೈನ್ಸ್ ವಿಮಾನದಲ್ಲಿ ಲ್ಯಾಂಡಿಂಗ್ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ವಿಮಾನದಲ್ಲಿ ಒಟ್ಟು 11 ಸಿಬ್ಬಂದಿ ಹಾಗೂ 278 ಪ್ರಯಾಣಿಕರು ಇದ್ದರು. ಲ್ಯಾಂಡಿಂಗ್ ಪ್ರಕ್ರಿಯೆಯಲ್ಲಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕದ ಕ್ಷಣಗಳು ಉಂಟಾಗಿವೆ.
ತಕ್ಷಣವೇ ವಿಮಾನದ ನಿಯಂತ್ರಣ ತಂಡ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದು, ಎಲ್ಲ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ಹೊರತರಲಾಗಿದ್ದಾರೆ.
ಲ್ಯಾಂಡಿಂಗ್ ಸಂದರ್ಭದಲ್ಲಿ ವಿಮಾನದ ಬಲಭಾಗದ ಟೈರ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.
ಅಷ್ಟರಲ್ಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಘಟನೆಯ ಕುರಿತು ಟರ್ಕಿಶ್ ವಿಮಾನಯಾನ ಸಂಸ್ಥೆ ಹಾಗೂ ವಿಮಾನ ನಿಲ್ದಾಣ ಆಡಳಿತದಿಂದ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.
ಇದಕ್ಕೂ ಮುನ್ನ 2015ರಲ್ಲಿ ಇದೇ ವಿಮಾನಯಾನ ಸಂಸ್ಥೆಯ ವಿಮಾನವು ಲ್ಯಾಂಡಿಂಗ್ ವೇಳೆ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದ ಘಟನೆ ನಡೆದಿತ್ತು. ನಂತರ ವಿಮಾನ ನಿಲ್ದಾಣವು ನಾಲ್ಕು ದಿನಗಳ ಕಾಲ ಬಂದ್ ಆಗಿತ್ತು.