ಬೀಳಗಿ- ಕಚೇರಿಗೆ ಆಗಮಿಸಿ ತಮ್ಮ ಸಮಸ್ಯೆಗಳ ಕುರಿತಾಗಿ ಜನರು ಅರ್ಜಿ ಸಲ್ಲಿಸಿದರೆ ಅದನ್ನು ಕೂಡಲೇ ಪರಿಹರಿಸಿ,ಒಂದು ವೇಳೆ
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ದೂರು ಬಂದರೆ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಎಚ್ಚರಿಕೆ ನೀಡಿದರು.
ಬೀಳಗಿ ತಹಶೀಲ್ದಾರ ಕಚೇರಿ ಆವರಣದಲ್ಲಿ ಹಮ್ಮಿಕೊಂಡ ಪ್ರಜಾಸೇವಾ ಅಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸ್ಪಂದಿಸುವ ಕೆಲಸವಾಗಬೇಕು. ಅದಕ್ಕಾಗಿಯೇ ವಿವಿಧ ಇಲಾಖೆಗಳ ಸೇವೆಗಳು ನೇರವಾಗಿ ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಸಾರ್ವಜನಿಕರಿಂದ ವಿವಿಧ ಇಲಾಖೆಗೆ ಸಂಬಂಧಿಸಿದ ಅಹವಾಲುಗಳನ್ನು ಆಲಿಸಿ, ಹಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಕಚೇರಿಗಳಿಗೆ ಪದೇಪದೇ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಅರ್ಜಿಗಳನ್ನು ಸ್ವೀಕರಿಸಿ ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಸರಕಾರ ನೇಗಿಲಯೋಗಿ, ಗ್ರಾಮ ಅನುಭವ ಸೇರಿದಂತೆ ಅನೇಕ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಬೀಳಗಿ ಶಾಸಕ ಜೆ.ಟಿ ಪಾಟೀಲ ಮಾತನಾಡಿ ಕೇವಲ ಸಾರ್ವಜನಿಕರ ಅಹವಾಲುಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಿದರೆ ಸಾಲದು ನಿಗದಿತ ಅವಧಿಯಲ್ಲಿ ಅದಕ್ಕೆ ಪರಿಹಾರ ಒದಗಿಸುವ ಕೆಲಸವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರ ಕರೆಗಳಿಗೆ ನೀರು ಹರಿಸುವಂತೆ ಅಧಿಕಾರಿಗಳು ಸ್ಪಂದಿಸಬೇಕು ಎಂದರು. ಮಂಟೂರು ಮಹಾಲಕ್ಷ್ಮೀ ಏತ ನೀರಾವರಿಯಿಂದ ನೀರು ಬಿಟ್ಟರೆ ಈ ಭಾಗದ ರೈತರಿಗೆ ಅನುಕೂಲವಾಗಲಿದೆ. ತಾಲೂಕಿನ ಕೆರೆಗಳು ತುಂಬಿಸುವ ಕೆಲಸವಾಗಬೇಕಿದೆ ಎಂದು ಸಚಿವರಿಗೆ ಕೇಳಿಕೊಂಡರು.
ನಂತರ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ಸಂಚಾರಕ್ಕೆ ಸೂಚನೆ ನೀಡಿದರೆ.ವಿಜಯಪುರದಿಂದ ಹುಬ್ಬಳ್ಳಿಗೆ ಸಂಚರಿಸುವ ಬಸ್‌ಗಳು ಬೀಳಗಿ ಪಟ್ಟಣದೊಳಗೆ ಸಂಚರಿಸುವಂತೆ ಕ್ರಮ ಕೈಗೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.
ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಕೆನಾಲ್‌ಗೆ ನೀರು ಬಿಡುಗಡೆಯಾಗದೆ ರೈತರಿಗೆ ತೊಂದರೆಯಾಗುತ್ತಿದೆ ಎಂಬ ರೈತರ ಅಹವಾಲಿನ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ AEE ಬಸವರಾಜ ಬಂಕಾಪೂರ ಅವರನ್ನು ಸಚಿವರು ತರಾಟೆಗೆ ತೆಗೆದುಕೊಂಡರು.
ಬರಗಾಲದಿಂದ ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ನೀರಾವರಿ ಸೌಲಭ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕು. ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ರೈತರ ಸಮಸ್ಯೆಗಳು, ಅಂಗವಿಕಲರ ಅಹವಾಲುಗಳು, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳು, ಆಶ್ರಯ ಮನೆಗಳಿಗೆ ಸಂಬಂಧಿಸಿದ ವಿಚಾರಗಳು ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು. 300ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡವು.
ಕೆಲವು ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಕ್ರಮ ಕೈಗೊಂಡ ಸಚಿವರು, ಇನ್ನು ಕೆಲವು ಪ್ರಕರಣಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಕಾಲಮಿತಿಯಲ್ಲಿ ಬಗೆಹರಿಸುವಂತೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಬೀಳಗಿ ಶಾಸಕ ಜೆ.ಟಿ.ಪಾಟೀಲ, ಗ್ಯಾರಂಟಿ ಯೋಜನೆ ಸಮಿತಿಯ ಜಿಲ್ಲಾ ಅದ್ಯಕ್ಷ ಅನೀಲಕುಮಾರ ದಡ್ಡಿ, ತಾಲೂಕಾಧ್ಯಕ್ಷ ಅನವೀರಯ್ಯ ಪ್ಯಾಟಿಮಠ,ಡಿಸಿ ಸಂಗಪ್ಪ, ಎಸ್.ಪಿ ಸಿದ್ದಾರ್ಥ ಗೋಯಲ್, ಡಿಎಫ್.ಒ ಸ್ವಪ್ನಿಲ್ ಅಹಿರೇ, ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಉಪ ವಿಭಾಗಾಧಿಕಾರಿ ಶ್ವೇತಾ ಬಿಡೇಕರ, ತಹಸೀಲ್ದಾರ್ ವಿನೋದ್ ಹತ್ತಳ್ಳಿ, ಪಪಂ ಮುಖ್ಯಾಧಿಕಾರಿ ದೇವೇಂದ್ರ ಧನಫಾಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.