ಬಳ್ಳಾರಿ, ಅ.07:: ಎಸ್‌ಐಆರ್ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ಕೂಡಲೇ ಹಿಂಪಡೆಯಬೇಕು ಹಾಗೂ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ವಿಚಾರಣೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್ ಆಗ್ರಹಿಸಿದರು.
ನಗರದ ಮೋಕಾ ರಸ್ತೆಯ ವಾಜಪೇಯಿ ಬಡಾವಣೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಅಥವಾ ತೆಗೆದುಹಾಕುವ ಪ್ರಕ್ರಿಯೆಗೆ ಚುನಾವಣಾ ಆಯೋಗದ ನಿಯಮಾನುಸಾರ ಫಾರಂ-7 ಸಲ್ಲಿಸಲಾಗಿದೆ. ಈ ವಿಚಾರ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ್ದಾಗಿದ್ದು, ಅಗತ್ಯವಿದ್ದವರು ಚುನಾವಣಾಧಿಕಾರಿ ಅಥವಾ ಚುನಾವಣಾ ಆಯೋಗದ ಮೊರೆ ಹೋಗಬೇಕಿತ್ತು. ಆದರೆ ಈ ವಿಚಾರದಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಸರಿಯಲ್ಲ ಎಂದರು.
ಬಿಎಲ್‌ಎ-1 ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಯಾವ ಅಧಿಕಾರವಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸದೆ ಫಾರಂ-7 ಸಲ್ಲಿಸಲಾಗಿದ್ದು, ಈ ವಿಚಾರದಲ್ಲಿ ಪೊಲೀಸರು ಕಾನೂನುಬದ್ಧವಾಗಿ ಯಾವ ಕ್ರಮ ಕೈಗೊಳ್ಳಬಹುದು ಎಂಬುದನ್ನು ವಿವರಿಸಬೇಕು ಎಂದು ಸತೀಶ್ ಪ್ರಶ್ನಿಸಿದರು.
ನಿನ್ನೆ ನಡೆದ ಪ್ರತಿಭಟನೆ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಎಳೆದಾಡಿ ಚದುರಿಸಲು ಮುಂದಾಗಿದ್ದು, ಈ ವೇಳೆ ಕೆಲವರಿಗೆ ಗಾಯಗಳಾಗಿವೆ. ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ ನಾಯ್ಡು ಅವರ ಮೇಲೂ ಪೊಲೀಸರು ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಿದ ಅವರು, ಜಿಲ್ಲಾಧ್ಯಕ್ಷರಿಗೆ ಭುಜ, ಕೈ ಹಾಗೂ ಬೆರಳಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆದಿರುವ ಬಗ್ಗೆ ವೈದ್ಯಕೀಯ ದಾಖಲೆಗಳಿವೆ ಎಂದು ತಿಳಿಸಿದರು.
ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರ ಹಕ್ಕಾಗಿದೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸದಸ್ಯರು ಚುನಾವಣಾ ಆಯೋಗದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಅವರ ವಿರುದ್ಧ ಇದೇ ರೀತಿಯ ಕ್ರಮ ಕೈಗೊಳ್ಳಲಾಗಿದೆಯೇ ಎಂಬುದನ್ನು ಪ್ರಶ್ನಿಸಿದ ಸತೀಶ್, ಸಾಮಾನ್ಯ ಕಾರ್ಯಕರ್ತರಿಗೂ ಪ್ರತಿಭಟನೆ ನಡೆಸುವ ಹಕ್ಕಿದೆ ಎಂದರು.
“ಬಿಎಲ್‌ಎ-1 ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ಕೂಡಲೇ ಹಿಂಪಡೆಯಬೇಕು. ಘಟನೆಗೆ ಸಂಬಂಧಿಸಿದಂತೆ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಸಿಪಿಐ ಹಾಗೂ ಎಪಿಎಂಸಿ ಪೊಲೀಸ್ ಠಾಣೆಯ ಸಿಪಿಐ ಅವರನ್ನು ಅಮಾನತುಗೊಳಿಸಿ ವಿಚಾರಣೆ ನಡೆಸಬೇಕು” ಎಂದು ಆಗ್ರಹಿಸಿದರು.
ಬಳ್ಳಾರಿಯಲ್ಲಿ ಕೆಲ ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸುವ ಬದಲು ಹೆಲ್ಮೆಟ್ ತಪಾಸಣೆಗೆ ನಿಲ್ಲುವಂತಹ ಪರಿಸ್ಥಿತಿ ಇದೆ ಎಂದು ಟೀಕಿಸಿದ ಅವರು, ಪೊಲೀಸರು ಕಾನೂನು ಮತ್ತು ನಿಯಮಗಳಂತೆ ತಮ್ಮ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರು ಹಾಗೂ ಪ್ರತಿಭಟನಾಕಾರರೊಂದಿಗೆ ಕಾನೂನುಬದ್ಧವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.
ಪೊಲೀಸರು ಎಚ್ಚರಿಕೆಯಿಂದ ಪರಿಶೀಲಿಸಬೇಕು.: ಸೋಮಶೇಖರ ರೆಡ್ಡಿ ಮಾಜಿ ಶಾಸಕ ಗಾಳಿ ಸೋಮಶೇಖರ ರೆಡ್ಡಿ ಮಾತನಾಡಿ, ನಿನ್ನೆ ನಡೆದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ್ದಾರೆ ಎನ್ನಲಾದ ದೌರ್ಜನ್ಯ ಸರಿಯಲ್ಲ. ಬಿಜೆಪಿ ಜಿಲ್ಲಾಧ್ಯಕ್ಷರನ್ನು ಗುರಿಯಾಗಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದರು.
ಪೊಲೀಸರು ಯಾವುದೇ ಪ್ರಕರಣ ದಾಖಲಿಸುವ ಮುನ್ನ ಘಟನೆ ಕುರಿತು ಸಮಗ್ರವಾಗಿ ಪರಿಶೀಲಿಸಬೇಕು. ರಾಜಕೀಯ ಒತ್ತಡಕ್ಕೆ ಮಣಿದು ಪ್ರಕರಣ ದಾಖಲಿಸಿದರೆ, ಪೊಲೀಸರು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಕಾರಣವಾಗುತ್ತದೆ. ಆದ್ದರಿಂದ ಪೊಲೀಸರು ಕಾನೂನುಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಬಳ್ಳಾರಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ ನಾಯ್ಡು, ಮಾಜಿ ಸಂಸದ ಸಣ್ಣ ಪಕ್ಕೀರಪ್ಪ, ಮಾಜಿ ಶಾಸಕ ಗಾಳಿ ಸೋಮಶೇಖರ ರೆಡ್ಡಿ, ಸುರೇಖಾ ಮಲ್ಲನಗೌಡ, ರಾಮಲಿಂಗಪ್ಪ, ಊರುಕುಂದ, ರಘು, ರವಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.