ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ, ಸಾರ್ವಜನಿಕರ ಕುಂದುಕೊರತೆ ಆಲಿಕೆ
ಶಹಾಪುರ: ಶಹಾಪುರ ತಾಲೂಕಿನ ಬೀರನೂರು ಗ್ರಾಮ ಪಂಚಾಯತಿಗೆ ಜಿಲ್ಲಾ ಪಂಚಾಯತ್ ಯಾದಗಿರಿ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಲವೀಶ್ ಒರಡಿಯಾ (ಭಾ.ಆ.ಸೇ) ಅವರು ಇಂದು ಭೇಟಿ ನೀಡಿ, ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತು ಸಮಗ್ರ ಮಾಹಿತಿ ಪರಿಶೀಲಿಸಿದರು.
ಗ್ರಾಮ ಪಂಚಾಯತಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದ ಸಿಇಒ ಅವರು, ನರೇಗಾ, ಕುಡಿಯುವ ನೀರು ಸರಬರಾಜು, ಸ್ವಚ್ಛ ಭಾರತ ಮಿಷನ್ ಸೇರಿದಂತೆ ಇತರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಪ್ರಗತಿ ಮಾಹಿತಿ ಪಡೆದು ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು.
ನಂತರ ಗ್ರಾಮದ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಕರ್ಯಗಳ ಸ್ಥಿತಿಗತಿ ವೀಕ್ಷಿಸಿ, ಅಗತ್ಯ ಬೇಡಿಕೆಗಳ ಕುರಿತು ಮಾಹಿತಿ ಸಂಗ್ರಹಿಸಿದರು. ಜೊತೆಗೆ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿ, ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಹಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಬಸವರಾಜ ಶರಭೈ, ಸಹಾಯಕ ನಿರ್ದೇಶಕರು, ಬೀರನೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು, ಪಿಡಿಒ, ಟಿಸಿ, ಟಿಎಇ, ಟಿಎಮ್‌ಐಎಸ್, ಟಿಐಇಸಿ, ಬಿಎಫ್‌ಟಿ, ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.